ಕೋಲಾರ, ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳ ತ್ವರಿತ ಸ್ಪಂದನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ದೊರೆತ ಸೌಲಭ್ಯಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ವರದಾನವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಇಂದು ಬಂಗಾರಪೇಟೆ ತಾಲ್ಲೂಕು ಮಾವಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಲಗನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರ ಗ್ರಾಮೀಣ ಪ್ರದೇಶದ ಜನರ ಅಹವಾಲುಗಳಿಗೆ ಸ್ಪಂದಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ. ಒಂದು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳನ್ನು ಆಯ್ದಕೊಂಡು ಅಲ್ಲಿನ ಸಾರ್ವಜನಿಕರ ಅಹವಾಲುಗಳನ್ನು ಗುರುತಿಸಿ, ತ್ವರಿತ ಪರಿಹಾರ ಒದಗಿಸುವ ಕಾರ್ಯಗಳು ಈ ಕಾರ್ಯಕ್ರಮದಿಂದ ಸಾಧ್ಯವಾಗುತ್ತಿವೆ. ಇಂದಿನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ ಪಿಂಚಣಿ ಮಂಜೂರಿ ಆದೇಶ, ಪೌತಿ ಖಾತೆ ಆದೇಶ, ಹಕ್ಕು ಪತ್ರ. ಪಹಣಿ ತಿದ್ದುಪಡಿ ಪತ್ರಗಳನ್ನು ವಿತರಿಸುತ್ತಿರುವುದು ಮಹತ್ವದ ಕಾರ್ಯವಾಗಿದೆ. ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ಒಂದು ತಂಡವಾಗಿ ಪ್ರತಿ ತಿಂಗಳು ಗ್ರಾಮವೊಂದಕ್ಕೆ ಬಂದು ಜನರಿಗೆ ಸ್ಪಂದಿಸುತ್ತಿರುವುದು ಸರ್ಕಾರದ ಜನಪರ ಕಾರ್ಯವಾಗಿದೆ. ಗ್ರಾಮೀಣ ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಗ್ರಾಮಕ್ಕೆ ೩೦ ಗುಂಟೆಗಳ ಸ್ಮಶಾನ ಭೂಮಿಯನ್ನು ಸ್ಥಳದಲ್ಲೇ ಮಂಜೂರು ಮಾಡಿದ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಇಂದಿರಾಗಾAಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ವಿಧವಾ ವೇತನ, ಆರೋಗ್ಯ ಇಲಾಖೆಯಿಂದ ತಾಯಿ ಕಾರ್ಡುಗಳು, ಆಭಾ ಕಾರ್ಡ್, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿಗಳು ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಈ ಸಂದರ್ಭದಲ್ಲಿ ಮಂಜೂರಾತಿ ಪತ್ರ, ಹಕ್ಕು ಪತ್ರ, ದಾಖಲೆಗಳನ್ನು ವಿತರಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಮಾತೃ ವಂದನಾ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದ ವತಿಯಿಂದ ಸೀಮಂತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗರ್ಭಿಣಿ ಸ್ತ್ರೀಯರು ಆರೋಗ್ಯದ ಕಾಳಜಿ ಮಾಡಬೇಕು ಮತ್ತು ಕಾಲ ಕಾಲಕ್ಕೆ ಸೂಕ್ತ ಔಷಧಿಗಳು ಹಾಗೂ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಕಿವಿಮಾತು ಹೇಳಿದರು. ನಂತರ ವಿವಿಧ ಇಲಾಖೆಗಳ ಮಳಿಗೆಗಳಿಗೆ ಭೇಟಿ ನೀಡಿ ಎಲ್ಲ ಇಲಾಖೆಗಳು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು ಸಾರ್ವಜನಿಕರು ಕೃಷಿ, ಆರೋಗ್ಯ, ತೋಟಗಾರಿಕೆ, ಪಶುಪಾಲನೆ, ಆಹಾರ ಇನ್ನೂ ಮುಂತಾದ ಚಟುವಟಿಕೆಗಳಿಗೆ ಸಂಬAದಿಸಿದ ಮಾಹಿತಿಯನ್ನು ಆಯಾ ಮಳಿಗೆಗಳಲ್ಲಿ ಪಡೆಯಬಹುದು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಗ್ರಾಮದಿಂದ ಗ್ರಾಮಕ್ಕೆ ನಿರ್ಮಿಸಲಾಗಿರುವ ರಸ್ತೆಗಳು ಒತ್ತುವರಿಗೆ ಒಳಗಾಗಿದ್ದು ಅದನ್ನು ತೆರವುಗೊಳಿಸಿಕೊಡುವಂತೆ ವಿನಂತಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಶೀಘ್ರದಲ್ಲಿ ಈ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾವಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀಮಾ ಸುಲ್ತಾನ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.